ರಾಜ್ಯ ಸುದ್ದಿ

ಅಲ್ಪಸಂಖ್ಯಾತರ ಅಭಿವೃದ್ಧಿಗೆ 500 ಕೋಟಿ ರೂ. ಅನುದಾನ: ಎಚ್‌.ಡಿ.ಕುಮಾರಸ್ವಾಮಿ

ಸುವರ್ಣಸೌಧ: ಅಲ್ಪಸಂಖ್ಯಾತರ ಅಭಿವೃದ್ಧಿಗೆ 500 ಕೋಟಿ ರೂ. ಹೆಚ್ಚುವರಿ ಅನುದಾನ ಈ ಬಾರಿಯ ಬಜೆಟ್‌ನಲ್ಲಿ ಒದಗಿಸಲಾಗಿದೆ ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಸುವರ್ಣಸೌಧದ ಸೆಂಟ್ರಲ್‌ ಹಾಲ್‌ನಲ್ಲಿ ನಡೆದ ಅಲ್ಪಸಂಖ್ಯಾತರ ಹಕ್ಕುಗಳ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಅಲ್ಪಸಂಖ್ಯಾತರ ಕಲ್ಯಾಣ ಕಾರ್ಯಕ್ರಮಗಳಿಗೆ ಅನುದಾನದಲ್ಲಿ ಕಡಿತ ಮಾಡಲಾಗಿದೆ ಎಂಬ ಆರೋಪ ನಿರಾಧಾರ.

ಹಿಂದಿನ ಸರ್ಕಾರ ಅಲ್ಪಸಂಖ್ಯಾತರ ಅಭಿವೃದ್ಧಿಗೆ ಹಲವಾರು ಕಾರ್ಯಕ್ರಮ ಜಾರಿಗೊಳಿಸಿದ್ದು ಎಲ್ಲ ಕಾರ್ಯಕ್ರಮವನ್ನು ಮೈತ್ರಿ ಸರ್ಕಾರದಲ್ಲಿ ಮುಂದುವರಿಸಲಾಗಿದೆ ಎಂದು ಹೇಳಿದರು. ಹಿಂದಿನ ಸರ್ಕಾರದ ಕಾರ್ಯಕ್ರಮಗಳನ್ನು ಮುಂದುವರಿಸುವುದರ ಜತೆಗೆ ಈ ಬಾರಿಯ ಬಜೆಟ್‌ನಲ್ಲಿ 500 ಕೋಟಿ ರೂ. ಹೆಚ್ಚುವರಿ ಅನುದಾನ ಒದಗಿಸಲಾಗಿದೆ. ಹೀಗಾಗಿ, ಚಾಲ್ತಿ ಯೋಜನೆಗಳಿಗೆ ಯಾವುದೇ ಹಣಕಾಸಿನ ಸಮಸ್ಯೆಯಿಲ್ಲ ಎಂದರು.

ಅಲ್ಪಸಂಖ್ಯಾತರ ನಿಗಮದ ಮೂಲಕ ಮುಸ್ಲಿಂ, ಕ್ರಿಶ್ಚಿಯನ್‌, ಜೈನರು ಸೇರಿ ಎಲ್ಲ ಅಲ್ಪಸಂಖ್ಯಾತರ ಕಾರ್ಯಕ್ರಮ ರೂಪಿಸಿ ಜಾರಿಗೊಳಿಸಲಾಗುತ್ತಿದೆ. ಅಲ್ಪಸಂಖ್ಯಾತರ ಶೈಕ್ಷಣಿಕ ಮತ್ತು ಆರ್ಥಿಕ ಪ್ರಗತಿಗಾಗಿ ಹಲವು ವಿನೂತನ ಕಾರ್ಯಕ್ರಮ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಹೇಳಿದರು.

ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಕ್ಫ್ ಸಚಿವ ಜಮೀರ್‌ ಅಹಮದ್‌ ಖಾನ್‌, ಹಿಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಹಾಗೂ ಈಗಿನ ಜೆಡಿಎಸ್‌-ಕಾಂಗ್ರೆಸ್‌ ಸಮ್ಮಿಶ್ರ ಸರ್ಕಾರ ಅಲ್ಪಸಂಖ್ಯಾತರ ಹಿತರಕ್ಷಣೆಗೆ ಎಲ್ಲ ರೀತಿಯಲ್ಲೂ ನೆರವು ಕಲ್ಪಿಸಿದೆ. ಅಧಿಕಾರಿಗಳು ಸರ್ಕಾರಿ ಸೌಲಭ್ಯಗಳ ಬಗ್ಗೆ ಸಮುದಾಯದಲ್ಲಿ ಜಾಗೃತಿ ಮೂಡಿಸಬೇಕು. ಯಾವುದೇ ಅಡೆತಡೆ ಇಲ್ಲದೆ ಫಲಾನುಭವಿಗಳಿಗೆ ಸೌಕರ್ಯ ತಲುಪುವಂತೆ ಮಾಡಬೇಕು ಎಂದು ತಿಳಿಸಿದರು.

ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌, ಸಚಿವರಾದ ಕೆ.ಜೆ.ಜಾರ್ಜ್‌, ಯು.ಟಿ.ಖಾದರ್‌, ಮಾಜಿ ಸಚಿವ ತನ್ವೀರ್‌, ಶಾಸಕರಾದ ಲಕ್ಷ್ಮಿ ಹೆಬ್ಟಾಳ್ಕರ್‌, ರಹೀಂಖಾನ್‌, ಖನೀಸ್‌ ಫಾತಿಮಾ, ಪರಿಷತ್‌ ಸದಸ್ಯರಾದ ಸಿ.ಎಂ.ಇಬ್ರಾಹಿಂ, ನಸೀರ್‌ ಅಹಮದ್‌, ಅಬ್ದುಲ್‌ ಜಬ್ಟಾರ್‌, ಐವಾನ್‌ ಡಿಸೋಜ ಪಾಲ್ಗೊಂಡಿದ್ದರು. ಇದೇ ಸಂದರ್ಭದಲ್ಲಿ ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ ಜಾರಿಗೊಳಿಸಲಾಗುತ್ತಿರುವ ಯೋಜನೆಗಳ ಮಾಹಿತಿ ಪುಸ್ತಕ ಬಿಡುಗಡೆ ಮಾಡಲಾಯಿತು.

 

About the author

ಕನ್ನಡ ಟುಡೆ

Leave a Comment