ರಾಜ್ಯ ಸುದ್ದಿ

ಉತ್ತರ ಕರ್ನಾಟಕದ ಸಚಿವರಿಗೆ ಒಳ್ಳೆಯ ಖಾತೆಗಳನ್ನು ನೀಡಬೇಕು: ಬಿ.ವೈ. ವಿಜಯೇಂದ್ರ

ಬಳ್ಳಾರಿ: ಸಮ್ಮಿಶ್ರ ಸರ್ಕಾರದ ಸಚಿವ ಸಂಪುಟದಲ್ಲಿ ಉತ್ತರ ಕರ್ನಾಟಕದ ಭಾಗದ ಶಾಸಕರಿಗೆ ಹೆಚ್ಚಿನ ಸಚಿವ ಸ್ಥಾನ ನೀಡಿದರೆ ಸಾಲದು, ಅದಕ್ಕೆ ತಕ್ಕಂತೆ ಒಳ್ಳೆಯ ಖಾತೆಗಳನ್ನು ನೀಡಬೇಕು ಎಂದು ಬಿಜೆಪಿ ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ವೈ.ವಿಜಯೇಂದ್ರ ಒತ್ತಾಯಿಸಿದ್ದಾರೆ.

ನಗರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಜಯೇಂದ್ರ, ಬರದ ನೆಪವೊಡ್ಡಿ ಐತಿಹಾಸಿಕ ಹಂಪಿ ಉತ್ಸವ ನಡೆಸಲು ರಾಜ್ಯ ಸರ್ಕಾರ ಹಿಂದೆ ಮುಂದೆ ನೋಡುತ್ತಿದೆ. ಸಿಎಂ ಕುಮಾರಸ್ವಾಮಿ ಕಳೆದ ಏಳು ತಿಂಗಳಿಂದ ಬೆಂಗಳೂರಿನಲ್ಲಿ ಐಷಾರಾಮಿ ಜೀವನ ನಡೆಸಲು ಕೋಟ್ಯಂತರ ರೂ. ಖರ್ಚು ಮಾಡಿದ್ದಾರೆ. ಆದರೆ ಹಂಪಿ ಉತ್ಸವವನ್ನು ಮಾತ್ರ ಸರಳವಾಗಿ ಮಾಡುತ್ತೇವೆ ಎಂದು ಹೇಳುತ್ತಿರುವುದು ವಿಪರ್ಯಾಸ ಎಂದು ಕಿಡಿ ಕಾರಿದರು.

ಲೋಕಸಭೆ ಚುನಾವಣೆ ದೇಶದ ಬದಲಾವಣೆಗೆ ಮುನ್ನುಡಿಯಾಗಿದೆ. ಈ ಹಿನ್ನೆಲೆ ಪಕ್ಷದ ಸಂಘಟನೆಗಾಗಿ ರಾಜ್ಯಾದ್ಯಂತ ಪ್ರವಾಸ ಮಾಡಲಾಗುತ್ತಿದೆ. ಮೋದಿಯವರು ಕಳೆದ ನಾಲ್ಕೂವರೆ ವರ್ಷದಲ್ಲಿ ಯಾವುದೇ ಹಗರಣಗಳು ಇಲ್ಲದೆ ಆಡಳಿತ ನಡೆಸಿದ್ದಾರೆ. ಒಂದೂವರೆ ಕೋಟಿ ಅಧಿಕ ಯುವಜನತೆ ಮುದ್ರಾಯೋಜನೆಯ ಸೌಲಭ್ಯ ಪಡೆದಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಕಾರ್ಯಕರ್ತರು ಮೋದಿ, ಅಟಲ್ ಬಿಹಾರಿ ವಾಜಪೇಯಿ ಸಾಧನೆಯನ್ನು ಮನೆ ಮನೆಗೆ ತಲುಪಿಸಬೇಕು. ಈ ಹಿನ್ನೆಲೆಯಲ್ಲಿ ಯುವ ಮೋರ್ಚಾ ವತಿಯಿಂದ ಪ್ರತಿದಿನ ಎರಡು ಜಿಲ್ಲೆಗಳಿಗೆ ಪ್ರವಾಸ ಮಾಡಿ ಪಕ್ಷ ಸಂಘಟನೆ ಮಾಡಲಾಗುತ್ತಿದೆ. ಜ.20ರಂದು ಕೋಲಾರದಲ್ಲಿ ಪ್ರವಾಸ ಕೊನೆಗೊಳ್ಳಲಿದೆ ಎಂದು ವಿಜಯೇಂದ್ರ ತಿಳಿಸಿದರು.

About the author

ಕನ್ನಡ ಟುಡೆ

Leave a Comment