ರಾಜಕೀಯ

ಚುನಾವಣೆಗೆ ಸ್ಪರ್ಧಿಸುವಂತೆ ಅಭಿಮಾನಿಗಳಿಂದ ಒತ್ತಡ: ಸಿದ್ದರಾಮಯ್ಯ ಭೇಟಿ ಬಳಿಕ ಸುಮಲತಾ ಅಂಬರೀಷ್

ಬೆಂಗಳೂರು: ಲೋಕಸಭೆ ಚುನಾವಣೆಗೆ ಸ್ಪರ್ಧಿಸುವಂತೆ ಮಂಡ್ಯ ಅಭಿಮಾನಿಗಳು ಸಾಕಷ್ಟು ಒತ್ತಡ ಹಾಕುತ್ತಿದ್ದಾರೆ ಎಂದು ಸುಮಲತಾ ಅಂಬರೀಷ್ ಅವರು ಬುಧವಾರ ಹೇಳಿದ್ದಾರೆ.
ಸುಮಲತಾ ಅವರು ಇಂದು ಸಂಜೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಮಂಡ್ಯ ಲೋಕಸಭಾ ಕ್ಷೇತ್ರದಿಂದ ಚುನಾವಣೆ ಸ್ಪರ್ಧಿಸುವ ಕುರಿತು ಚರ್ಚಿಸಿದ್ದಾರೆ. ಸುಮಲತಾ ಅವರು ನಾಳೆ ಮಂಡ್ಯಕ್ಕೆ ಭೇಟಿ ನೀಡುತ್ತಿದ್ದು, ಅದನ್ನು ಮುನ್ನ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಸಿದ್ದರಾಮಯ್ಯ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸುಮಲತಾ, ನಾನು ನಾಳೆ ಮಂಡ್ಯಗೆ ಭೇಟಿ ನೀಡುತ್ತಿದ್ದೇನೆ ಎಂದರೆ ರಾಜಕಾರಣಕ್ಕೆ ಎಂಟ್ರಿ ಕೊಡುತ್ತೇನೆ ಅಂತಾ ಅಲ್ಲ. ವೀರ ಯೋಧರು ಹುತಾತ್ಮರಾಗಿದ್ದಾರೆ. ಅವರ ಕುಟುಂಬಕ್ಕೆ ಸಾಂತ್ವನ ಹೇಳಲು ಹೋಗ್ತಿದ್ದೇನೆ ಅಷ್ಟೇ ಎಂದರು.
ಲೋಕಸಭೆ ಚುನಾವಣೆಗೆ ನಿಲ್ಲುವಂತೆ ಮಂಡ್ಯ ಅಭಿಮಾನಿಗಳು ಒತ್ತಾಯಿಸುತ್ತಿದ್ದಾರೆ. ಅವರ ಅನಿಸಿಕೆಯನ್ನು ಹಿರಿಯ ಕಾಂಗ್ರೆಸ್ ನಾಯಕರ ಜೊತೆ ಚರ್ಚೆ ಮಾಡಬೇಕು ಅಂತ ತೀರ್ಮಾನಿಸಿದ್ದೆ. ಈ ಕಾರಣಕ್ಕೆ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದೇನೆ. ಅಭಿಮಾನಿಗಳ ಅಪೇಕ್ಷೆ ಏನೂ ಅನ್ನೋದನ್ನು ಸಿದ್ದರಾಮಯ್ಯ ಮುಂದೆ ಹೇಳಿದ್ದೇನೆ. ಸಿದ್ದರಾಮಯ್ಯ ಈ ಬಗ್ಗೆ ಯೋಚನೆ ಮಾಡುವುದಾಗಿ ತಿಳಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಅಭಿಪ್ರಾಯ ಏನಿದೆ ಅನ್ನೋದನ್ನು ತಿಳಿದುಕೊಳ್ಳಬೇಕಿದೆ. ಹೀಗಾಗಿ ನಾನು ಆತುರ ಮಾಡೋದಿಲ್ಲ. ಮೈತ್ರಿ ವಿಚಾರಕ್ಕೆ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟುಕೊಡಬೇಕಾದರೆ ಆಗ ನಾನು ಜನರ ಅಭಿಪ್ರಾಯಕ್ಕೆ ಮನ್ನಣೆ ಕೊಡ್ತೀನಿ. ಮಂಡ್ಯದ ಜನರ ಅಭಿಪ್ರಾಯವೇ ಅಂತಿಮ. ಮಂಡ್ಯದ ನಾಯಕರ ವಿಶ್ವಾಸಕ್ಕೆ ತೆಗೆದುಕೊಳ್ಳದೇ ಮುಂದುವರೆಯುವುದಕ್ಕೆ ಸಾಧ್ಯವಿಲ್ಲ ಎಂದರು.

About the author

ಕನ್ನಡ ಟುಡೆ

Leave a Comment