ರಾಜಕೀಯ

ಮುನಿಯಪ್ಪ ಖರೀದಿ ಆಟ ನಡೆಯದು: ಬಿಎಸ್‌.ಯಡಿಯೂರಪ್ಪ

ಮಾಲೂರು/ಬಂಗಾರಪೇಟೆ: ಕೋಲಾರ ಲೋಕಸಭೆ ಚುನಾವಣೆಗಳಲ್ಲಿ ಸಂಸದ ಕೆ.ಎಚ್‌.ಮುನಿಯಪ್ಪ ಪ್ರತಿಪಕ್ಷದ ಅಭ್ಯರ್ಥಿಗಳನ್ನು ವಾಮಮಾರ್ಗದ ಮೂಲಕ ಖರೀದಿಸಿ ಚುನಾವಣೆಯಲ್ಲಿ ಗೆಲುವು ಪಡೆಯುತ್ತಿದ್ದರು. ಆದರೆ ಈ ಬಾರಿಯ ಚುನಾವಣೆಯಲ್ಲಿ ಖರೀದಿಯಾಗದಂತಹ ಅಭ್ಯರ್ಥಿ ಎಸ್‌.ಮುನಿಸ್ವಾಮಿ ಅವರನ್ನು ಕಣಕ್ಕಿಳಿಸಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಹೇಳಿದರು.

ಪಟ್ಟಣದಲ್ಲಿ ಸೋಮವಾರ ನಡೆದ ಬಹಿರಂಗ ಪ್ರಚಾರ ಸಭೆಯಲ್ಲಿ ಮಾತನಾಡಿ, ”ಜಿಲ್ಲೆಯಲ್ಲಿ ಈ ಹಿಂದೆ ನಡೆದಿರುವ ಬಹುತೇಕ ಚುನಾವಣೆಗಳಲ್ಲಿ ಸಂಸದ ಕೆ.ಎಚ್‌.ಮುನಿಯಪ್ಪ ಅವರು ಕೊನೆಯ ಹಂತದಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಖರೀದಿಸಿ ಚುನಾವಣೆಯಲ್ಲಿ ಗೆಲುವು ಸಾಧಿಸುತ್ತಿದ್ದರು. ಆದರೆ ಈ ಬಾರಿ ಅದು ನಡೆಯುವುದಿಲ್ಲ,” ಎಂದರು.

ಕಾವೇರಿ ನದಿ ಜೋಡಣೆ: ಜಿಲ್ಲೆಯಲ್ಲಿ ಶಾಶ್ವತ ನೀರಾವರಿ ಯೋಜನೆ ಅನುಷ್ಠಾನದ ಜತೆಗೆ ಗೋದಾವರಿ-ಕಾವೇರಿ ನದಿಗಳನ್ನು ಜೋಡಿಸಿ, ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ನೀರಾವರಿ ಕಲ್ಪಿಸಲಾಗುವುದು ಎಂದು ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ. ಬಂಗಾರಪೇಟೆಯಲ್ಲಿ ನಡೆದ ಬೃಹತ್‌ ರೋಡ್‌ ಶೋನಲ್ಲಿ ಭಾಗವಹಿಸಿ ಮಾತನಾಡಿ, ಕೋಲಾರ ಜಿಲ್ಲೆಯಲ್ಲಿ ಈ ಬಾರಿ ಕಮಲ ಅರಳಿಸಿದರೆ ಬಿಜೆಪಿ ಸರಕಾರ ರಚಿಸಿ ಶಾಶ್ವತ ನೀರಾವರಿ ಯೋಜನೆಯಾದ ಎತ್ತಿನಹೊಳೆ ಯೋಜನೆ ಅನುಷ್ಠಾನಗೊಳಿಸಿ ಎಲ್ಲಾ ಕೆರೆಗಳಿಗೂ ನೀರು ಹರಿಸಲಾಗುವುದು ಎಂದರು. ಏಳು ಬಾರಿ ಸಂಸದರಾಗಿ, ಎರಡು ಬಾರಿ ಸಚಿವರಾಗಿದ್ದ ಕೆ.ಎಚ್‌.ಮುನಿಯಪ್ಪ ಈ ಜಿಲ್ಲೆಗೆ ಏನು ಕೊಡುಗೆ ನೀಡಿದ್ದಾರೆ ಎನ್ನುವುದನ್ನು ಜನತೆ ಅರಿತು ಈ ಬಾರಿ ಬಿಜೆಪಿಯನ್ನು ಬೆಂಬಲಿಸಿ ಅತಿ ಹೆಚ್ಚು ಮತಗಳಿಂದ ಗೆಲ್ಲಿಸಬೇಕು ಎಂದು ಮನವಿ ಮಾಡಿದರು.

About the author

ಕನ್ನಡ ಟುಡೆ

Leave a Comment