ಪರಿಸರ

ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆ ಸಾಧ್ಯತೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯಾಗುವ ಸಾಧ್ಯತೆಯಿದೆ ಎಂದು ರಾಜ್ಯ ಹವಾಮಾನ ಇಲಾಖೆ ತಿಳಿಸಿದೆ. ಈಗಾಗಲೇ ಆಂಧ್ರಪ್ರದೇಶ ಹಾಗೂ ತಮಿಳುನಾಡಿನಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ರಾಜ್ಯದಲ್ಲಿಯೂ ನ.24 ವರೆಗೆ ಮಳೆಯಾಗಲಿದೆ. ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆಗಳಿವೆ ಎಂದು ಕರ್ನಾಟಕ ರಾಜ್ಯನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ ಶ್ರೀನಿವಾಸ್‌ ರೆಡ್ಡಿ ತಿಳಿಸಿದ್ದಾರೆ.

ಬುಧವಾರ ಬೆಳಗ್ಗೆಯಿಂದಲೇ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮೋಡಕವಿದ ವಾತಾವರಣ ಉಂಟಾಗಿತ್ತು. ಕೆಲವೆಡೆ ತುಂತುರು ಮಳೆಯಾಗಿದೆ. ಉತ್ತರ ಒಳನಾಡು ಹಾಗೂ ಕರಾವಳಿ ಭಾಗದಲ್ಲಿ ಮಳೆಯಾಗುವ ಸಾಧ್ಯತೆಗಳಿಲ್ಲ ಎಂದ ಅವರು, ವಾಯುಭಾರ ಕುಸಿತದಿಂದ ವೇಗದ ಗಾಳಿಯ ಜತೆಗೆ ಚಳಿಗಾಳಿಯೂ ಬೀಸುತ್ತಿದೆ. ಸುಮಾರು 30 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದೆ. ಇನ್ನು ಎರಡು ದಿನ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಚಳಿಗಾಳಿ ಬೀಸಲಿದೆ.

ಬುಧವಾರ ರಾಜ್ಯದ ಕೆಲವೆಡೆ ಸಾಧಾರಣ ಮಳೆಯಾಗಿದ್ದು, ಕೋಲಾರದಲ್ಲಿ 17 ಮಿ. ಮೀ ನೊಂದಿಗೆ ಅತಿ ಹೆಚ್ಚು ಮಳೆಯಾಗಿದೆ. ದಾವಣಗೆರೆ 15 ಮಿ.ಮೀ., ಬಾಗಲಕೋಟೆಯಲ್ಲಿ 10, ಬೆಳಗಾವಿಯಲ್ಲಿ 5, ತುಮಕೂರಿನಲ್ಲಿ 6.8, ಧಾರವಾಡ 3.5 ಹಾಗೂ ಮೈಸೂರಿನಲ್ಲಿ 1.5 ಮಿ.ಮೀ ಮಳೆಯಾಗಿದೆ.

About the author

ಕನ್ನಡ ಟುಡೆ

Leave a Comment