ರಾಜಕೀಯ

ಸರ್ಕಾರ ಉರುಳಿಸುವ ಯಾವುದೇ ಪ್ರಯತ್ನ ಮಾಡುತ್ತಿಲ್ಲ: ಯಡಿಯೂರಪ್ಪ

ನವದೆಹಲಿ: ರಾಜ್ಯದ ಬಿಜೆಪಿಯು ಸರ್ಕಾರ ಉರುಳಿಸಲು ಯಾವುದೇ ರೀತಿಯ ಪ್ರಯತ್ನಗಳನ್ನೂ ಮಾಡುತ್ತಿಲ್ಲ. ಅದೇ ರೀತಿ ಸಚಿವ ಸ್ಥಾನ ಕಳೆದುಕೊಂಡಿರುವ ರಮೇಶ್ ಜಾರಕಿಹೊಳಿ ನಮ್ಮ ಸಂಪರ್ಕದಲ್ಲಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರು ಶುಕ್ರವಾರ ಹೇಳಿದ್ದಾರೆ.
ಜೆಡಿಎಸ್-ಕಾಂಗ್ರೆಸ್ ನೇತೃತ್ವದ ಸಮ್ಮಿಶ್ರ ಸರ್ಕಾರ ಶೀಘ್ರದಲ್ಲಿಯೇ ಪತನವಾಗಲಿದೆ ಎಂಬ ಬಿಜೆಪಿ ನಾಯಕರ ಹೇಳಿಕೆಗಳ ಬೆನ್ನಲ್ಲೇ ಯಡಿಯೂರಪ್ಪ ಅವರು ನಿನ್ನೆಯಷ್ಟೇ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರನ್ನು ರಾಜಧಾನಿ ದೆಹಲಿಯಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಯಡಿಯೂರಪ್ಪ ಹಾಗೂ ಅಮಿತ್ ಶಾ ಅವರ ಭೇಟಿ ಹಲವು ಅನುಮಾನಗಳಿಗೆ ದಾರಿ ಮಾಡಿಕೊಟ್ಟಿತ್ತು. ಶಾ ಅವರೊಂದಿಗೆ 10 ನಿಮಿಷಗಳ ಕಾಲ ಮಾತುಕತೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ ಅವರು, ಅಮಿತ್ ಶಾ ಅವರೊಂದಿಗೆ ರಾಜ್ಯ ರಾಜಕೀಯದ ಬಗ್ಗೆ ಯಾವುದೇ ಚರ್ಚೆ ನಡೆಸಿಲ್ಲ. ಜ.11 ಮತ್ತು 12ರಂದು ನಡೆಯಲಿರುವ ರಾಷ್ಟ್ರೀಯ ಕಾರ್ಯಕಾರಿಣಿಗೆ ಸಂಬಂಧಿಸಿದಂತೆ ಕೆಲವು ಮಾಹಿತಿಗಳನ್ನು ಅವರಿಗೆ ನೀಡಿದ್ದೇನಂದು ಹೇಳಿದರು.
ಇದೇ ವೇಳೆ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಪ್ರಾಥಮಿಕ ಮಾಹಿತಿ ಸಂಗ್ರಹ ಕಾರ್ಯವು ಜ.10ರೊಳಗೆ ಮುಗಿಯಲಿದೆ. ಆ ಬಳಿಕವೇ ಮುಂದಿನ ತಯಾರಿಗಳು ನಡೆಯಲಿದೆ ಎಂದು ತಿಳಿಸಿದ್ದಾರೆ. ರಾಜ್ಯ ಬಿಜೆಪಿಯು ಸರ್ಕಾರ ಉರುಳಿಸಲು ಯಾವುದೇ ರೀತಿಯ ಪ್ರಯತ್ನಗಳನ್ನು ಮಾಡುತ್ತಿಲ್ಲ. ಅದೇ ರೀತಿಯಲ್ಲಿ ರಮೇಶ್ ಜಾರಿಕಿಹೊಳಿ ಸಂಪ್ರರ್ಕಿಸುವ ಪ್ರಯತ್ನವನ್ನು ಮಾಡಿಲ್ಲ. ನಾನು ಅವರನ್ನೂ ಭೇಟಿಯಾಗಿಲ್ಲ, ಮಾತುಕತೆಯೂ ನಡೆಸಿಲ್ಲ ಎಂದಿದ್ದಾರೆ.

About the author

ಕನ್ನಡ ಟುಡೆ

Leave a Comment