ಕರೋನಾ ಭೀತಿ ಹಿನ್ನಲೆಯಲ್ಲಿ 10 ನೇ ತರಗತಿ ಪರೀಕ್ಷೆ ಮುಂದೂಡಿಕೆ – ಮುಖ್ಯಮಂತ್ರಿ ಯಡಿಯೂರಪ್ಪ ಘೋಷಣೆ

ಕರೋನಾ ಭೀತಿ ಹಿನ್ನೆಲೆಯಲ್ಲಿ ಮಾರ್ಚ್ 27 ರಿಂದ ಆರಂಭವಾಗಬೇಕಿದ್ದ 10ನೇ ತರಗತಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಮುಖ್ಯಮಂತ್ರಿ ಬಿ.ಎಸ್.‌ ಯಡಿಯೂರಪ್ಪ ಈ ಕುರಿತು ಅಧಿಕೃತ ಘೋಷಣೆ ಮಾಡಿದ್ದಾರೆ. ತಮ್ಮ ನಿವಾಸದ ಬಳಿ ಪತ್ರಕರ್ತರೊಂದಿಗೆ ಮಾತನಾಡಿದ ಯಡಿಯೂರಪ್ಪ ಈ ವಿಷಯ ಪ್ರಕಟಿಸಿದ್ದಾರೆ.

ಮುನ್ನೆಚ್ಚರಿಕಾ ಕ್ರಮವಾಗಿ ಈಗಾಗಲೇ ಸಿಬಿಎಸ್ಸಿ, ಐಸಿಎಸ್‌ಇ ಪರೀಕ್ಷೆಗಳನ್ನೂ ಮುಂದೂಡಲಾಗಿದ್ದು, ಈಗ ರಾಜ್ಯ ಸರ್ಕಾರ ಹತ್ತನೇ ತರಗತಿ ಪರೀಕ್ಷೆ ಮುಂದೂಡುವ ಕುರಿತು ಮಹತ್ವದ ತೀರ್ಮಾನ ಕೈಗೊಂಡಿದೆ.

ಪರೀಕ್ಷೆ ಮುಂದೂಡುವ ಕುರಿತಂತೆ ಹಲವು ಸುತ್ತಿನ ಸಮಾಲೋಚನೆ ನಡೆದಿದ್ದು, ಅಂತಿಮವಾಗಿ ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳುವುದು ಒಳ್ಳೆಯದು ಎಂಬ ತೀರ್ಮಾನಕ್ಕೆ ಬರಲಾಗಿದೆ.

ಈ ಮೊದಲು 9ನೇ ತರಗತಿವರೆಗಿನ ಪರೀಕ್ಷೆಗಳನ್ನು ರದ್ದುಪಡಿಸಿದ ರಾಜ್ಯ ಸರ್ಕಾರ ಶಾಲಾ – ಕಾಲೇಜುಗಳಿಗೆ ರಜೆ ಘೋಷಿಸಿತ್ತು.

ದ್ವಿತೀಯ ಪಿಯುಸಿ ಪರೀಕ್ಷೆ ಅದಾಗಲೇ ಆರಂಭವಾಗಿದ್ದ ಕಾರಣ ಯಾವುದೇ ನಿರ್ಧಾರ ಕೈಗೊಳ್ಳಲು ಸಾಧ್ಯವಾಗಿರಲಿಲ್ಲ. ಇದೀಗ 10ನೇ ತರಗತಿ ಪರೀಕ್ಷೆ ಮುಂದೂಡುವ ಕುರಿತು ತೀರ್ಮಾನಿಸಲಾಗಿದೆ.

Share
WhatsApp
Follow by Email