ಬೆಂಗಳೂರು : ಚಾಮರಾಜನಗರ ಜಿಲ್ಲಾ ಆಸ್ಪತ್ರೆಯಲ್ಲಿ ಆಮ್ಲಜನಕದ ಕೊರತೆಯಿಂದ 24 ಮಂದಿ ಕೋವಿಡ್ ರೋಗಿಗಳು ಮೃತಪಟ್ಟಿರುವುದಕ್ಕೆ ರಾಜ್ಯ ಸರ್ಕಾರವೇ ಹೊಣೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದರು.
ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರಾಜ್ಯ ಸರ್ಕಾರದ ವೈಫಲ್ಯದಿಂದ 24 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಮತ್ತು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಸುರೇಶ್ ಕುಮಾರ್ ನೇರವಾಗಿ ಘಟನೆಯ ಹೊಣೆ ಹೊತ್ತುಕೊಳ್ಳಬೇಕು. ಜಿಲ್ಲಾ ಉಸ್ತುವಾರಿ ಸಚಿವರು ತಕ್ಷಣ ರಾಜೀನಾಮೆ ನೀಡಬೇಕು’ ಎಂದು ಸಿದ್ದರಾಮಯ್ಯನವರು ಆಗ್ರಹಿಸಿದರು.
ಚಾಮರಾಜನಗರ ಜಿಲ್ಲೆಗೆ ಮೈಸೂರಿನಿಂದ ಆಮ್ಲಜನಕ ಪೂರೈಕೆಯಾಗುತ್ತದೆ. ಶುಕ್ರವಾರದಿಂದಲೇ ಸಮಸ್ಯೆ ಆರಂಭವಾಗಿತ್ತು. ಆದರೆ, ಸರ್ಕಾರ ಎಚ್ಚೆತ್ತುಕೊಂಡು ಕ್ರಮ ಜರುಗಿಸಲಿಲ್ಲ. ಸರ್ಕಾರದ ನಿರ್ಲಕ್ಷ್ಯದಿಂದ ದುರಂತ ಸಂಭವಿಸಿದೆ ಎಂದು ಸಿದ್ದರಾಮಯ್ಯ ದೂರಿದರು.
ಚಾಮರಾಜನಗರ ಜಿಲ್ಲೆಗೆ ಅಗತ್ಯಕ್ಕಿಂತಲೂ ಕಡಿಮೆ ಪ್ರಮಾಣದ ಆಮ್ಲಜನಕದ ಪೂರೈಕೆಯಾಗಿದೆ. ಘಟನೆಯ ಕುರಿತು ನ್ಯಾಯಾಂಗ ತನಿಖೆ ನಡೆಸಬೇಕು. ದುರಂತಕ್ಕೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು